Sunday, May 5, 2024
spot_img
HomeChikballapurಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ: ಜಿಲ್ಲಾಧಿಕಾರಿ ಆರ್.ಲತಾ

ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಈ ಬಾರಿಯ ಗಣರಾಜ್ಯೋತ್ಸವ  ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿಕೊಂಡು ಅರ್ಥಪೂರ್ಣವಾಗಿ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ಪೂರ್ವಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ  ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಈ ಬಾರಿ  ಕೋವಿಡ್  ಸಾಂಕ್ರಾಮಿಕ ಕಾಯಿಲೆ   ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಧ್ವಜಾರೋಹಣ, ಗೌರವ ವಂದನೆ , ಗಣ್ಯರ  ಭಾಷಣ, ಪೊಲೀಸ್ ಕವಾಯತು, ಪಥಸಂಚಲನ  ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುತ್ತಿದೆ ಎಂದರು.

ಕೋವಿಡ್-19ರ ಸೋಂಕು ಹರಡದಂತೆ ನಿಯಂತ್ರಿಸಲು ಅಂದು ಜಿಲ್ಲಾ ಕ್ರೀಡಾಂಗಣದಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಕೈ ತೊಳೆಯುವಿಕೆ, ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದ ವ್ಯಕ್ತಿಗಳ ಕೋವಿಡ್ ಪರೀಕ್ಷೆಗಾಗಿ  ಮೊಬೈಲ್ ವಾಹನವನ್ನು ಇರಿಸಬೇಕು. ತುರ್ತು ಆರೋಗ್ಯ ಚಿಕಿತ್ಸೆಗಾಗಿ ವೈದ್ಯಕೀಯ ಸಂಚಾರಿ ಘಟಕವನ್ನು ಸ್ಥಾಪಿಸಬೇಕು ಮತ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಕಾರ್ಯಕ್ರಮದ ಹಿಂದಿನ ದಿನ ಮತ್ತು ಕಾರ್ಯಕ್ರಮದ ದಿನದಂದು ಕ್ರೀಡಾಂಗಣದಲ್ಲಿ ಅಗತ್ಯವಿರುವ ಕಡೆ ಸ್ಯಾನಿಟೈಸ್ ಮಾಡಿಸಬೇಕು. ಜೊತೆಗೆ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಹಾಗೂ ಯಾವುದೇ ಕಾರ್ಯದಲ್ಲಿ ಲೋಪಗಳು ಉಂಟಾಗದಂತೆ ನಿಗಾವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರೊಂದಿಗೆ  ಸರ್ಕಾರದ ಕೋವಿಡ್-19ರ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments