Tuesday, May 7, 2024
spot_img
HomeChikballapurಮದ್ಯ ಸೇವಿಸಿ ಸೇವೆಗೆ ಹಾಜರಾದಲ್ಲಿ ಅಮಾನತು: ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್

ಮದ್ಯ ಸೇವಿಸಿ ಸೇವೆಗೆ ಹಾಜರಾದಲ್ಲಿ ಅಮಾನತು: ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್

 ಪಾಲಾರ್ ಪತ್ರಿಕೆ | Palar Pathrike

ಚಿಕ್ಕಬಳ್ಳಾಪುರ: ಮದ್ಯ ಸೇವಿಸಿ ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ಹಾಜರಾಗಿ ಕರ್ತವ್ಯ ಲೋಪವೆಸಗುವ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ದೌರ್ಜನ್ಯಗಳನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ಸುರಕ್ಷತೆಗಾಗಿ ರಚಿಸಿರುವ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಸದಸ್ಯರ ಸಲಹೆಗಳನ್ನು  ಸ್ವೀಕರಿಸಿ  ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರು ಮದ್ಯ ಸೇವಿಸಿ ಹಾಜರಾಗುವುದು ಕಂಡು ಬಂದಲ್ಲಿ ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಮದ್ಯಪಾನ ಸೇವನೆ ಮಾಡಿರುವುದು ಖಚಿತಪಡಿಸಿದಲ್ಲಿ ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು  ಶಿಸ್ತು ಕ್ರಮವನ್ನು ವಹಿಸಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಅಮಾನತುಗೊಂಡ ಶಿಕ್ಷಕರ ಸೇವೆಗೆ ಬೇರೊಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 
ಬಾರ್ ಗಳ ಪರವನಾಗಿ ರದ್ದುಪಡಿಸಿ
ಬಾರ್, ರೆಸ್ಟೋರೆಂಟ್ ಮದ್ಯದಂಗಡಿಗಳಿಂದ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯಪಾನ ನೇರವಾಗಿ ಸರಬರಾಜು ಮಾಡುತ್ತಿರುವ ಘಟನೆಗಳು ಕಂಡು ಬಂದಲ್ಲಿ ಕೂಡಲೇ ಅಂತಹ ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಅವರ ಪರವಾನಗಿಯನ್ನು ರದ್ದುಪಡಿಸಬೇಕು. ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಹೆಚ್ಚೆಚ್ಚು ಪ್ರಕರಣ ದಾಖಲಿಸುವ ಮೂಲಕ ಅಕ್ರಮ ಮದ್ಯ ಮಾರಾಟವನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಹತೋಟಿಗೆ ತರಬೇಕು ಎಂದರು. 
ಸ್ಮಶಾನಕ್ಕೆ ರಸ್ತೆ ಮಾರ್ಗ
ಗ್ರಾಮೀಣ ಭಾಗದಲ್ಲಿರುವ ಸಾರ್ವಜನಿಕರ ಸ್ಮಶಾನಗಳಿಗೆ ಸೂಕ್ತ ರಸ್ತೆ ಮಾರ್ಗಗಳನ್ನು ಕಲ್ಪಿಸಬೇಕು. ಜೊತೆಗೆ ರಾಜಕಾಲುವೆ, ಸರ್ಕಾರಿ ಜಮೀನು ಇತರೆ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಗಳಿಗೆ ಸೂಚಿಸಿದರು.  
ಸರ್ಕಾರದ ಆಶಯವನ್ನು, ಯೋಜನೆಗಳ ಉದ್ದೇಶವನ್ನು ಈಡೇರಿಸುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಿದರೆ ಸಾಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಗಳಡಿಯ ಫಲಾನುಭವಿಗಳಿಗೆ ಯೋಜನೆಯ ಸೇವೆಗಳು ಅಚ್ಚುಕಟ್ಟಾಗಿ ಪೂರ್ಣ ಪ್ರಮಾಣದಲ್ಲಿ ತಲುಪಿಸಬೇಕು ಎಂದರು.
 ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸದಿದ್ದರೂ ಕೂಡ ಈ ಕಾಯ್ದೆಯಡಿ ಪ್ರಕರಣ ದಾಖಲಿಸಿ  ಸಂಬಂಧಪಟ್ಟವರನ್ನ ಶಿಕ್ಷೆಗೆ ಒಳಪಡಿಸಬಹುದುದಾಗಿದೆ. ಅಂತಹ ಪರಿಸ್ಥಿತಿಗೆ ಜಿಲ್ಲೆಯ ಯಾವ ಅಧಿಕಾರಿಗಳು ಅವಕಾಶ ಮಾಡಿಕೊಡಬಾರದು. ಸೂಕ್ತ ರೀತಿಯಲ್ಲಿ ಅನುದಾನ ವಿಲೇವಾರಿ ಮಾಡಬೇಕು ಎಂದರು. 
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪೊಲೀಸ್ ಠಾಣೆಗಳಲ್ಲಿ ನೀಡಲಾಗುವ ದೂರುಗಳನ್ನು ಸಮರ್ಪಕವಾಗಿ, ತ್ವರಿತಗತಿಯಲ್ಲಿ ಎಫ್.ಐ.ಆರ್ ದಾಖಲಿಸಿ, ದೋಷರೋಪಣಾ ಪಟ್ಟಿಯನ್ನು ಸೂಕ್ತ ರೀತಿಯಲ್ಲಿ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಠಾಣೆಯಲ್ಲಿನ ಅಧಿಕಾರಿಗಳು ಗಮನಹರಿಸಬೇಕು. ಯಾವುದೇ ರೀತಿಯ ಒತ್ತಾಯ, ಒತ್ತಡಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಂಶವನ್ನು  ದಾಖಲೀಕರಣ ಮಾಡುವ ಮೂಲಕ ಕಾನೂನು ಬದ್ಧವಾಗಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾವಹಿಸಲು ಸೂಚಿಸಿದರು. 
ಜಿಲ್ಲೆಯಲ್ಲಿ ಯಾರಾದರೂ ಸಫಾಯಿ ಕರ್ಮಾಚಾರಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ಇದ್ದಲ್ಲಿ ಅಂತಹವನ್ನು ಗುರ್ತಿಸಿ ಪುನರ್ವಸತಿ ಕಲ್ಪಿಸಲು ಅಧಿಕಾರಿಗಳು ಪ್ರಮಾಣಿಕವಾಗಿ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ಷೇತ್ರ ವೀಕ್ಷಣೆ ಮಾಡಿ ಪರಿಶೀಲಿಸಬೇಕು ಎಂದು ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಣರೆಡ್ಡಿ, ಎಲ್ಲಾ ತಾಲ್ಲೂಕು ತಹಸೀಲ್ದಾರ್ ಗಳು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಎಂ.ವೇಣು, ಟಿ.ಮಂಜುನಾಥ್, ರತ್ನಮ್ಮ, ಕೆ.ನರೇಂದ್ರ, ಸಫಾಯಿ ಕರ್ಮಚಾರಿಗಳ ಸುರಕ್ಷತೆಗಾಗಿ ರಚಿಸಿರುವ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments