ಪಾಲಾರ್ ಪತ್ರಿಕೆ | Palar Pathrike
ಶಿಡ್ಲಘಟ್ಟ ; ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿ ಇರುವ BGS ವಿದ್ಯಾಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಮಾತೃಭೋಜನ ಸಮಾರಂಭದಲ್ಲಿ ಭಾಗವಹಿಸಿ ಮಕ್ಕಳು ಮತ್ತು ಪೋಷಕರನ್ನುದ್ದೇಶಿಸಿ ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅವರು ಮಾತನಾಡಿದರು.
ಮಕ್ಕಳಿಗೆ ಉತ್ತಮವಾದ ವಾತಾವರಣ ಕಲ್ಪಿಸಿದಿದ್ದಲ್ಲಿ ಮಕ್ಕಳು ಪರಿಪಕ್ವವಾಗಿ ಬೆಳೆಯಲು ಸಾಧ್ಯವಿಲ್ಲ. ಹಾಗಾಗಿ ಮಕ್ಕಳಿಗೆ ಆದರ್ಶಮಯವಾದ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಸಂಸ್ಕಾರವನ್ನು ಬೆಳೆಸುವ ಜವಾಬ್ದಾರಿ ತಾಯಿಯ ಮೇಲಿರುತ್ತದೆ ಎಂದು ಹೇಳಿದರು.
ಮನೆಯೇ ಮೊದಲ ಪಾಠಶಾಲೆ ಎಂಬ ಹಿರಿಯರ ಮಾತಿನಂತೆ ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಮಕ್ಕಳಿಗೆ ಮನೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡುವಲ್ಲಿ ಪೋಷಕರು ಹೆಚ್ಚಿನ ಗಮನಹರಿಸಬೇಕು. ಹಾಗೆಯೇ ಮಕ್ಕಳು ದೇವರ ಪ್ರತಿರೂಪವಾದ ತಾಯಿಯನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು BGS ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಬಹಳಷ್ಟು ಮಹತ್ತರವಾದದ್ದು ಹಾಗಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಸಹಕಾರವನ್ನು ಪೋಷಕರು ಶಿಕ್ಷಕರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ಮಕ್ಕಳಿಗೆ ಮೊಬೈಲ್ ನೀಡಬೇಡಿ, ಮಕ್ಕಳಿಗೆ ಮನೆಯಲ್ಲಿ ಮೊಬೈಲ್ ನೀಡುವುದರಿಂದ ನೀವು ನಿಮ್ಮ ಇಡೀ ಜೀವನ ನೋವನುಭವಿಸಬೇಕಾಗುತ್ತದೆ ಎಂದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪೋಷಕರು ಮಾತೃಭೋಜನ ಸಮಾರಂಭಕ್ಕಾಗಿ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿನಿಸುಗಳನ್ನು ಮಕ್ಕಳಿಗೆ ಬಡಿಸಿ ತಿನ್ನಿಸಿ ತಾವೂ ಸವಿದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಗೀತ ಸಂಯೋಜಕರು ಹಾಗು ಗೀತ ರಚನೆಕಾರರಾದ ಡಾ.ಜಯಶ್ರೀಅರವಿಂದ್, ಹಿನ್ನಲೆಗಾಯಕಿ ಶ್ರೀರಕ್ಷಾ ಪ್ರಿಯರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ, ಎಸ್‌ಜೆಸಿಐಟಿ ಪ್ರಾಂಶುಪಾಲ ಡಾ.ಜಿ.ಟಿ.ರಾಜು, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್, ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.